ಅಂಡಮಾನ್ ಮತ್ತು ನಿಕೋಬಾರ್ ಭಾಗದಲ್ಲಿ ಅಪ್ಪಳಿಸಲಿರುವ ‘ಆಸನಿ’ ಚಂಡಮಾರುತದಿಂದ ರಾಜ್ಯಕ್ಕೆ ಹೆಚ್ಚಿನ ಅಪಾಯ ಇರುವುದಿಲ್ಲ. ಆದರೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ 24 ರವರೆಗೆ ಮಳೆಯಾಗುವ ಮುನ್ಸೂಚನೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿರುವ ಪ್ರಬಲ ವಾಯುಭಾರ ಕುಸಿತವು ಇಂದು ಸೋಮವಾರ ಸಂಜೆ ವೇಳೆ ಮತ್ತಷ್ಟು ತೀವ್ರಗೊಂಡು ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಚಂಡಮಾರುತ ರಾಜ್ಯಕ್ಕೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ. ಕೆಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು.
ಅಸನಿ ಚಂಡಮಾರುತ ಕಲ್ಕತ್ತಾ ಹಾಗೂ ಚೆನ್ನೈ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ. ಬಳಿಕ ಚಂಡಮಾರುತವಾಗಿ ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್ ಕರಾವಳಿಯತ್ತ ಸಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳ ಹಲವೆಡೆ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.