ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಎಂಜಿನಿಯರ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ.
ಕಾರು ಮತ್ತು ಟ್ರಕ್ ನಡುವೆ ಅಪಘಾತವಾಗಿದ್ದು, ಕಾರಿನಲ್ಲಿದ್ದ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳಲ್ಲಿ ಇಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಮೌಳೇಶ್ವರ ರೆಡ್ಡಿ, ತೇಜಸ್ ಮೃತ ದುರ್ದೈವಿಗಳು. ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ 2 ನೇ ವರ್ಷದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಮೌಳೇಶ್ವರ ರೆಡ್ಡಿ, ಸುಹಾನ್, ತೇಜಸ್ ಹಾಗೂ ಶುಭಂಕರ ಕಾರಿನಲ್ಲಿ ಮೈಸೂರಿನ ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೌಳೇಶ್ವರ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದರೆ,ತೇಜಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳಿಗೆ ಮೈಸೂರಿನ ಡಿ.ಆರ್.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.