ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಎರಡು ವರ್ಷ ಹೆಚ್ಚಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳ ಮಾಡುವಂತೆ ಆಕಾಂಕ್ಷಿಗಳು ಸರ್ಕಾರಕ್ಕೆ ಒತ್ತಾಯಿಸಿದ್ದರು. ತುಮಕೂರಿನಲ್ಲಿ ಮನವಿಗೆ ಸ್ಪಂದಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಸಂಬಂಧ ಚರ್ಚಿಸುವುದಾಗಿ ತಿಳಿಸಿದ್ದರು. ಇದೀಗ 2 ವರ್ಷ ವಯೋಮಿತಿಯನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.
ಕೊರೊನಾದಿಂದಾಗಿ ಕಳೆದ ಮೂರು ವರ್ಷಗಳಲ್ಲಿ ನಿಯಮಿತವಾಗಿ ನೇಮಕಾತಿ ನಡೆಯದ ಪ್ರಯುಕ್ತ ಆಕಾಂಕ್ಷಿತ ಅಭ್ಯರ್ಥಿ ಅರ್ಜಿ ಸಲ್ಲಿಸಲು ಅವಕಾಶ ವಂಚಿತವಾಗಿರುವುದರಿಂದ ವಯೋಮಿತಿಯಲ್ಲಿ ಎರಡು ವರ್ಷಗಳ ವಿನಾಯಿತಿ ನೀಡುವಂತೆ ಹಲವಾರು ಮನವಿಗಳು ಬಂದಿತ್ತು. ಈ ಹಿನ್ನೆಲೆ 2022-23 ನೇ ಸಾಲಿನಲ್ಲಿ ಕರೆದಿರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ. ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಒಂದು ವಾರಗಳ ಕಾಲ ವಿಸ್ತರಿಸುವಂತೆ ಸೂಚನೆ ನೀಡಲಾಗಿದೆ.
ಗೃಹ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್ಸಿ/ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸೇವಾ ನಿರತ ಅಭ್ಯರ್ಥಿಗಳ ವಯೋಮಿತಿಯಲ್ಲಿ ಎಸ್ಸಿ/ ಎಸ್ಟಿ ಅಭ್ಯರ್ಥಿಗಳ ವಯಸ್ಸಿಗೆ 35 ಜಾಗೂ ಇತರೆ ಅಭ್ಯರ್ಥಿಗಳಿಗೆ 33 ವರ್ಷಗಳಿಗೆ ಹೆಚ್ಚಿಸಲಾಗಿದೆ.
ಸಶಸ್ತ್ರ ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 31 ವರ್ಷ ಹಾಗೂ ಎಸ್ಸಿ/ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 33 ವರ್ಷಗಳನ್ನು ನಿಗಧಿ ಪಡಿಸಿ ಆದೇಶವನ್ನು ಹೊರಡಿಸಿದ್ದಾರೆ.