ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ವರದಿಯಾಗಿದ್ದು, ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲಾಗಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 9.15 ಗಂಟೆ ಸುಮಾರಿನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 2.9 ತೀವ್ರತೆ ದಾಖಲಾಗಿದೆ. ಜಿಲ್ಲೆಯ ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿ ಹಲವು ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಭೂಮಿಯ 5 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಮಾಹಿತಿ ನೀಡಿದೆ.
ವಿಜಯಪುರ ಜಿಲ್ಲೆಯಲ್ಲಿ ಮೇಲಿಂದ ಮೇಲೆ ಸಂಭವಿಸುತ್ತಿರುವ ಭೂಕಂಪನಗಳಿಂದ ಜನರು ಆತಂಕಗೊಂಡಿದ್ದಾರೆ.