ಬೆಂಗಳೂರು: ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷ ಕಡ್ಡಾಯವಾಗಿ ಧ್ಯಾನದ ಅಭ್ಯಾಸ ಮಾಡಿಸುವಂತೆ ಶಿಕ್ಷಣ ಸಚಿವರು ಸೂಚಿಸಿದ್ದಾರೆ.
ನಾಲ್ಕು ದಿನಗಳ ಹಿಂದೆಯಷ್ಟೇ ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಬ್ಯಾಗ್ರಹಿತ ‘ಸಂಭ್ರಮದ ಶನಿವಾರ’ ಆಚರಿಸಲು ಸೂಚಿಸಿದ ಬೆನ್ನಲ್ಲೇ ಮತ್ತೊಂದು ಮಹತ್ವದ ನಿರ್ಧಾರವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದ್ದಾರೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು, ‘ಧ್ಯಾನದ ಅಭ್ಯಾಸವು ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿ. ಈ ನಿಟ್ಟಿನಲ್ಲಿ ರಾಜ್ಯದಲ್ಲಿನ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಸಮಯ ನಿಗದಿಪಡಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ’ ಎಂದು ತಿಳಿಸಿದ್ದಾರೆ.
‘ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಈಗಾಗಲೇ ಮಕ್ಕಳಲ್ಲಿ ಧ್ಯಾನ ಅಭ್ಯಾಸ ಮಾಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಧ್ಯಾನವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕೋರಿರುತ್ತಾರೆ’ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಧ್ಯಾನದ ಜತೆಯಲ್ಲಿ ಯೋಗ, ಪ್ರಾಣಾಯಾಮ ಒಳಗೊಂಡಿರುತ್ತದೆಯೇ ಎಂಬ ಬಗ್ಗೆ ಸುತ್ತೋಲೆಯಲ್ಲಿ ಸ್ಪಷ್ಟ ಸೂಚನೆ ನೀಡಿಲ್ಲ. ಧ್ಯಾನದಲ್ಲೂ ಹಲವು ಪ್ರಕಾರಗಳಿದ್ದು, ಶಾಲೆಯಲ್ಲಿ ಮಕ್ಕಳಿಗೆ ಯಾವದನ್ನು ಕಲಿಸಲಾಗುತ್ತದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂಬ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ತಿಂಗಳಲ್ಲಿ ಒಂದು ಶನಿವಾರ ಬ್ಯಾಗ್ರಹಿತ ‘ಸಂಭ್ರಮ ಶನಿವಾರ’ ಆಚರಿಸುವಂತೆ ಈಚೆಗೆ ಸೂಚನೆ ನೀಡಿತ್ತು.