ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಜಾಗಗಳಲ್ಲಿ ನಮಾಜ್‌ಗೆ ಅವಕಾಶ ಮಾಡಿಕೊಡದಂತೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ
ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ
ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.
ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಜಾಗಗಳಲ್ಲಿ ನಮಾಜ್‌ಗೆ ಅವಕಾಶ ಕೊಟ್ಟು ಉಳಿದ ಸಂಘಟನೆಗಳನ್ನಿ ನಿರ್ಬಂಧಿಸುವುದು ಸರ್ಕಾರದ ಆಡಳಿತ ವಿಶ್ವಾಸರ್ಹತೆಗೆ ಧಕ್ಕೆ ಉಂಟು ಮಾಡುತ್ತದೆ. ಸಾರ್ವಜನಿಕ ಸ್ಥಳಗಳನ್ನು ಅನುಮತಿಯಿಲ್ಲದೇ ಧಾರ್ಮಿಕ ಚಟುವಟಿಕೆಗಳಿಗೆ ಬಳಸುವುದಕ್ಕೆ ನಿರ್ಬಂಧ ಹೇರುವ ಸಲುವಾಗಿ ಏಕರೂಪದ ಕ್ರಮಗಳನ್ನು ಕೈಗೊಳ್ಳಬೇಕು. ಆ ಮೂಲಕ ಜ್ಯಾತ್ಯಾತೀತೆ, ಕಾನೂನಿನ ಮುಂದೆ ಎಲ್ಲರೂ ಸಮಾನರು ಮತ್ತು ಸಾರ್ವಜನಿಕ ಕಾನೂನು ಸುವ್ಯವಸ್ಥೆಗೆ ಸರ್ಕಾರದ ಬದ್ಧತೆಯನ್ನು ಪ್ರದರ್ಶನ ಮಾಡ್ಬೇಕು.
ಸಾರ್ವಜನಿಕ ಸ್ಥಳಗಳು, ರಸ್ತೆಗಳು, ಪಾದಾಚಾರಿ ಮಾರ್ಗ ಮತ್ತು ಸರ್ಕಾರಿ ಕಚೇರಿಗಳಲ್ಲಿ ಅನುಮತಿ ಇಲ್ಲದೇ ನಮಾಜ್ ಮಾಡುವುದರ ವಿರುದ್ಧ ಕ್ರಮಕೈಗೊಳ್ಳುವ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ರಸ್ತೆಗಳಲ್ಲಿ ನಮಾಜ್ ಮಾಡುವುದರಿಂದ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟಾಗುತ್ತದೆ. ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲೂ ಪೂರ್ವಾನುಮತಿ ಇಲ್ಲದೇ ನಮಾಜ್ ಮಾಡುವುದಕ್ಕೆ ನಿರ್ಬಂಧ ಹೇರಬೇಕು.
ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಿಸ್ತು, ಧಾರ್ಮಿಕ ಒಳಗೊಳ್ಳುವಿಕೆ, ಸಂಚಾರಕ್ಕೆ ಅಡ್ಡಿ ಆಗುವುದನ್ನು ತಪ್ಪಿಸುವ ಸಲುವಾಗಿ ಸಾರ್ವಜನಿಕ ಮತ್ತು ಸರ್ಕಾರಿ ಸ್ಥಳಗಳಲ್ಲಿ ನಮಾಜ್‌ಗೆ ನಿಷೇಧ ಹೇರಿ
ಎಂದು ಶಾಸಕ ಯತ್ನಾಳ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.


