ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳವಾಗುವ ಸಾಧ್ಯತೆ ಇದೆ. ನವೆಂಬರ್‌ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿರುವ ಹೊತ್ತಲ್ಲೇ 3ನೇ ಬಾರಿಗೆ ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಏರಿಕೆ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ.
ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಮತ್ತು ಡೀಸೆಲ್ ಮೇಲೆ ಪ್ರತಿ ಲೀಟರ್‌ಗೆ 1 ರೂಪಾಯಿ ತೆರಿಗೆ ಹೆಚ್ಚಳ ಮಾಡುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಗ್ಯಾರಂಟಿ ಯೋಜನೆಗಳ ಕಾರಣದಿಂದ ಉಂಟಾಗಿರುವ ಆರ್ಥಿಕ ಹೊರೆ, ಸಂಪುಟ ಪುನರ್‌ರಚನೆಯಾದರೆ ಭುಗಿಲೇಳಬಹುದಾದ ಶಾಸಕರ ಸಿಟ್ಟನ್ನು ತಣಿಸಲು ಬೇಕಾದ ಅಗತ್ಯ ಆರ್ಥಿಕ ಸಂಪನ್ಮೂಲದ ಕ್ರೋಢೀಕರಣದ ಅನಿವಾರ್ಯತೆ ಮತ್ತು ಶಾಸಕರ ಅನುದಾನದ ಹೆಚ್ಚಳದ ಅನಿವಾರ್ಯತೆಯ ಹಿನ್ನೆಲೆಯಲ್ಲಿ ಮೂರನೇ ಬಾರಿಗೆ ತೆರಿಗೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಆಲೋಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷದ ಜೂನ್ 15ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ತಲಾ 3 ರೂಪಾಯಿ ಹೆಚ್ಚಳ ಮಾಡಿದ್ದರು.
ಇದಾದ ಬಳಿಕ ಇದೇ ವರ್ಷದ ಏಪ್ರಿಲ್ 1ರಿಂದ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿದ್ದರು.
ಸದ್ಯಕ್ಕೆ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 102 ರೂಪಾಯಿ 94 ಪೈಸೆ ಇದ್ದರೆ, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 91 ರೂಪಾಯಿ 2 ಪೈಸೆ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಾದ ಪ್ರಕಾರ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 2 ಬಾರಿ ತೆರಿಗೆ ಹೆಚ್ಚಳ ಮಾಡಿದ್ದರೂ ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸಿದ್ರೆ ಕಾಂಗ್ರೆಸ್ ಸರ್ಕಾರದಲ್ಲಿ ತೆರಿಗೆ ಹೆಚ್ಚಳದ ಬಳಿಕವೂ ಕಡಿಮೆ ಇದೆ ಎಂದು ಹೇಳಿದ್ದರು.
ಬಿಜೆಪಿ ಸರ್ಕಾರದಲ್ಲಿ ಪೆಟ್ರೋಲ್ ಲೀಟರ್‌ಗೆ 107 ರೂಪಾಯಿ 43 ಪೈಸೆ ಇದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ 92 ರೂಪಾಯಿ 3 ಪೈಸೆಯಷ್ಟಿತ್ತು.


