ಜಿಬಿಎ (GBA) ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ (footpath) ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳಲು ಜುಲೈ 1 (July 1) ರವರೆಗೆ ಅವಕಾಶ ನೀಡಲಾಗುವುದು. ಜುಲೈ 1ರ ನಂತರ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ”ವನ್ನು ಆರಂಭಿಸಲಾಗುವುದು ಎಂದು ಗ್ರೇಟರ್ ಬೆಂಗಳೂರು (Greater Bengaluru) ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ (Krishna Byregowda) ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಬಿಎ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಹಾಗೂ ದುರಸ್ತಿ ಕಾಮಗಾರಿಗಳ ಕುರಿತು ಇಂದು ನಡೆದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾದಚಾರಿ ಮಾರ್ಗದಲ್ಲಿ ನಡೆಯುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದ್ದು, ಅದನ್ನು ಅನುಷ್ಠಾನಗೊಳಿಸಲು ಎಲ್ಲಾ ರಾಜ್ಯಗಳ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಅದರಂತೆ, ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಕೂಡ ಈ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದರು.
ನಗರದಲ್ಲಿ ಸುಮಾರು 13 ಸಾವಿರ ಕಿ.ಮೀ ರಸ್ತೆ ಜಾಲವಿದ್ದು, ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳಂತಹ ಆದ್ಯತಾ ರಸ್ತೆಗಳಾದ ಸುಮಾರು 2,000 ಕಿ.ಮೀ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಎಲ್ಲಾ ಅಡೆತಡೆಗಳನ್ನು ತೆರವುಗೊಳಿಸಲು ಆಂದೋಲನ ಮಾದರಿಯಲ್ಲಿ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ” ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದರು.
ಒತ್ತುವರಿಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಅವಕಾಶ:
ನಗರದಾದ್ಯಂತ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲಾಗುವುದು. ಅನೇಕ ಅಂಗಡಿಗಳು ತಮ್ಮ ಸಾಮಗ್ರಿಗಳು, ನಾಮಫಲಕಗಳು ಹಾಗೂ ಇತರೆ ವಸ್ತುಗಳನ್ನು ಪಾದಚಾರಿ ಮಾರ್ಗಗಳ ಮೇಲೆ ಇರಿಸುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಆದ್ದರಿಂದ ಅಂಗಡಿ ಮಾಲೀಕರಿಗೆ ಜುಲೈ 1ರವರೆಗೆ ಸ್ವಯಂಪ್ರೇರಿತವಾಗಿ ಒತ್ತುವರಿಗಳನ್ನು ತೆರವುಗೊಳಿಸಿಕೊಳ್ಳಲು ಅವಕಾಶ ನೀಡಲಾಗುತ್ತಿದೆ. ಆ ಬಳಿಕವೂ ಒತ್ತುವರಿ ಮುಂದುವರಿದಲ್ಲಿ ಪಾಲಿಕೆಯಿಂದಲೇ ತೆರವುಗೊಳಿಸಿ, ನಿಯಮಾನುಸಾರ ದುಭಾರಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
ಪಾದಚಾರಿ ಮಾರ್ಗಗಳು ಸಾರ್ವಜನಿಕರ ಆಸ್ತಿ:
ಪಾದಚಾರಿ ಮಾರ್ಗಗಳು ನಗರದ ಸುಮಾರು 1.5 ಕೋಟಿ ಜನರ ಆಸ್ತಿಯಾಗಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ತಮ್ಮ ವ್ಯಾಪಾರ ಚಟುವಟಿಕೆಗಳನ್ನು ತಮ್ಮ ಜಾಗದ ಮಿತಿಯಲ್ಲಿಯೇ ನಡೆಸಬೇಕು. ಸುರಕ್ಷಿತ ಪಾದಚಾರಿ ಮಾರ್ಗಗಳ ನಿರ್ಮಾಣ ಜನರ ಬಹುದಿನಗಳ ಬೇಡಿಕೆಯಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಗೌರವಿಸಿ ಎಲ್ಲರೂ ಒತ್ತುವರಿಗಳನ್ನು ತೆರವುಗೊಳಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಅಪಘಾತಗಳಲ್ಲಿ ಶೇ.30 ಪಾದಚಾರಿಗಳ ಸಾವು:
ನಗರದಲ್ಲಿ ಪ್ರತಿವರ್ಷ ಸುಮಾರು 1,000 ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದು, ಅವರಲ್ಲಿ ಸುಮಾರು ಶೇ.30ರಷ್ಟು ಪಾದಚಾರಿಗಳೇ ಆಗಿದ್ದಾರೆ. ಸುರಕ್ಷಿತ ಹಾಗೂ ಸುಗಮ ಪಾದಚಾರಿ ಮಾರ್ಗಗಳು ಲಭ್ಯವಿದ್ದರೆ ಇಂತಹ ಅನೇಕ ಅಪಘಾತಗಳನ್ನು ತಡೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದರು.


