ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಹೆಸರು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕೇಂದ್ರದ ವಿಮಾನಯಾನ ಸಚಿವರಿಗೆ ಬಿಎಸ್ ಯಡಿಯೂರಪ್ಪನವರ ಹೆಸರು ನಾಮಕರಣ ಮಾಡುವ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದರು. ಆ ಬೆನ್ನಲ್ಲೇ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪರ ವಿರೋಧದ ಚರ್ಚೆ ನಡೆದಿತ್ತು.
ಇದೀಗ, ಸ್ವತಃ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೇ ಸಿಎಂ ಬೊಮ್ಮಾಯಿಯವರಿಗೆ ಪತ್ರ ಬರೆದು ತಮ್ಮ ಹೆಸರು ಇಡದಂತೆ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಸಿಎಂಗೆ ಪತ್ರ ಬರೆದಿರುವ ಅವರು, ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚಿಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದ.
ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು, ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದರೆ ನನ್ನದು ಅಳಿಲು ಸೇವೆ ಮಾತ್ರವಾಗಿದೆ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾ ಭಾವ ನನ್ನನ್ನಲ್ಲಿದೆ. ಈ ಹಿನ್ನಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ತಮ್ಮ ಈ ನಿರ್ಧಾರ ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಯಡಿಯೂರಪ್ಪನವರು ಕೋರಿದ್ದಾರೆ.
ADVERTISEMENT
ADVERTISEMENT