ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯ (ಐಸಿಡಿಎಸ್) ಮೂಲಕ ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಪೂರೈಸುತ್ತಿರುವ ಕಳಪೆ ಗುಣಮಟ್ಟದ ಆಹಾರವನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಬಾಗಲಕೋಟೆಯ ಸಂಗೀತಾ ಗದಗಿನ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ.
ಪರಿಷ್ಕೃತ ಪೌಷ್ಟಿಕಾಂಶ ಮತ್ತು ಆಹಾರ ಮಾನದಂಡಗಳಿಗೆ ಅನುಗುಣವಾಗಿಲ್ಲದ ಆಹಾರ ಉತ್ಪನ್ನಗಳನ್ನುಯಾವುದೇ ಕಾರಣಕ್ಕೂ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡಬಾರದು. ಕೇಂದ್ರ ಸರ್ಕಾರದ ಪರಿಷ್ಕೃತ ಮಾನದಂಡಗಳ ಪ್ರಕಾರವೇ ಗುಣಮಟ್ಟದ ಆಹಾರ ಪೂರೈಸಬೇಕು. ಐಸಿಡಿಎಸ್ ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.
ಕೋವಿಡ್-19ರ ಸಾಂಕ್ರಾಮಿಕದ ಕಾರಣದಿಂದಾಗಿ ಐಸಿಡಿಎಸ್ ಯೋಜನೆಯ ಫಲಾನುಭವಿಗಳ ಸ್ಥಿತಿ ಹದಗೆಟ್ಟಿದೆ. ಆದ್ದರಿಂದ ಫಲಾನುಭವಿಗಳಿಗೆ ಪೌಷ್ಟಿಕಾಂಶದ ಆಹಾರ ಪೂರೈಕೆಯನ್ನು ಇನ್ನಷ್ಟು ವಿಳಂಬ ಮಾಡಬಾರದು ಎಂದು ನ್ಯಾಯಪೀಠ ಸರ್ಕಾರಕ್ಕೆ ಕಟ್ಟುನಿಟ್ಟಿನ ತಾಕೀತು ಮಾಡಿದೆ.
ಐಸಿಡಿಎಸ್ ಯೋಜನೆಯನ್ನು ಕೇಂದ್ರ ಸರ್ಕಾರ 1975ರ ಅಕ್ಟೋಬರ್ 2ರಂದು ಜಾರಿಗೆ ತಂದಿದ್ದು, ಇದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಲಕ್ಷ್ಮಿ ಅಯ್ಯಂಗಾರ್ ಮತ್ತು ಎ.ಎಸ್.ಪೊನ್ನಣ್ಣ ವಾದ ಮಂಡಿಸಿದ್ದರು.