ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದ ಮೇಲಿನ ಸಾಲದ ಮೊತ್ತ ಎರಡು ಪಟ್ಟು ಅಂದ್ರೆ 5 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ. ಇತ್ತ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಬರಬೇಕಿರುವ ತೆರಿಗೆ ಪಾಲಿನ ಮೊತ್ತ ಭಾರೀ ಕಡಿತಗೊಂಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಯವ್ಯಯದಲ್ಲಿ ಹೇಳಿದ್ದಾರೆ.
ಕರ್ನಾಟಕ ರಾಜ್ಯವು ಆರ್ಥಿಕ ಶಿಸ್ತನ್ನು ಪಾಲಿಸುವ ರಾಜ್ಯವೆಂದೇ ಹೆಸರಾಗಿದೆ. ಆದರೆ ಹಿಂದಿನ ಸರ್ಕಾರವು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಸೋತಿದೆ. ರಾಜ್ಯದ ಒಟ್ಟು ಹೊಣೆಗಾರಿಕೆಗಳು 2017-18ರ ಅಂತ್ಯಕ್ಕೆ 2,45,737 ಕೋಟಿ ರೂ.ಗಳಷ್ಟಿದ್ದು, 2022-23ರ ಅಂತ್ಯಕ್ಕೆ 5,16,788 ಕೋಟಿ ರೂ.ಗಳಿಗೆ ಹೆಚ್ಚಳವಾಗಿದೆ ಹಾಗೂ ರಾಜ್ಯ ಸರ್ಕಾರದ ಸಾಲದ ಮೇಲಿನ ಬಡ್ಡಿ ಪಾವತಿಯು 2017-18ರಲ್ಲಿ ರಾಜಸ್ವ ಸ್ವೀಕೃತಿಗಳ ಶೇ.9.5 ರಷ್ಟಿದ್ದರೆ, 2023-24ರಲ್ಲಿ ರಾಜಸ್ವ ಸ್ವೀಕೃತಿಯ ಶೇ.15.06 ಕ್ಕೆ ಹೆಚ್ಚಳವಾಗಿರುತ್ತದೆ.
ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕವು ಪ್ರಮುಖ ರಾಜ್ಯವಾಗಿದ್ದರೂ ಸಹ ಕೇಂದ್ರ ಸರ್ಕಾರ ಹಂಚಿಕೆ ಮಾಡುವ ಒಟ್ಟು ತೆರಿಗೆಯಲ್ಲಿ ಶೇ. 3.65 ರಷ್ಟು ಮಾತ್ರ ರಾಜ್ಯಕ್ಕೆ ನೀಡಲಾಗುತ್ತಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಿಂದಾಗಿ ನಮ್ಮ ರಾಜ್ಯಕ್ಕೆ ಅತೀ ಹೆಚ್ಚು ನಷ್ಟವಾಗಿದ್ದು, ಇದು ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯಕ್ಕೆ ದ್ರೋಹ ಬಗೆದಂತಾಗಿದೆ.
ಇದರಿಂದಾಗಿ 2023-24ರ ಆರ್ಥಿಕ ವರ್ಷದಲ್ಲಿ 10,858 ಕೋಟಿ ರೂ.ಗಳಷ್ಟು ತೆರಿಗೆ ಪಾಲು ಕಡಿಮೆಯಾಗಿರುತ್ತದೆ ಹಾಗೂ ಕಳೆದ ಮೂರು ವರ್ಷಗಳಲ್ಲಿ ರಾಜ್ಯಕ್ಕೆ ಒಟ್ಟಾರೆ 26,140 ಕೋಟಿ ರೂ.ಗಳ ನಷ್ಟವಾಗಿರುತ್ತದೆ.
೧೫ನೇ ಹಣಕಾಸು ಆಯೋಗವು ತನ್ನ ವರದಿಯನ್ನು ಸಲ್ಲಿಸುವಾಗ ಕೇಂದ್ರದಲ್ಲಿ ತಮ್ಮ ಪಕ್ಷವೇ ಅಧಿಕಾರದಲ್ಲಿದ್ದರೂ ಸಹ ಹಿಂದಿನ ಸರ್ಕಾರವು ರಾಜ್ಯ ವಿರೋಧಿಯಾಗಿರುವ ಆಯೋಗದ ವರದಿಯನ್ನು ಒಪ್ಪಿಕೊಳ್ಳದಿರುವಂತೆ, ಒತ್ತಡವನ್ನು ತರದೆ ಮೂಕ ಪ್ರೇಕ್ಷಕರಾಗಿದ್ದು, ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ವಿಫಲವಾಗಿದೆ.
2019-20ಕ್ಕೆ ಹೋಲಿಸಿದರೆ 2020-21ರಲ್ಲಿ ನಮ್ಮ ರಾಜ್ಯದ ತೆರಿಗೆ ಪಾಲು ಕಡಿಮೆಯಾದ್ದರಿಂದ 15ನೇ ಹಣಕಾಸು ಆಯೋಗವು 2020-21ಕ್ಕೆ ಅನ್ವಯವಾಗುವಂತೆ ನಮ್ಮ ರಾಜ್ಯಕ್ಕೆ 5,495 ಕೋಟಿ ರೂ.ಗಳ ವಿಶೇಷ ಅನುದಾನವನ್ನು ನೀಡುವಂತೆ ಮಧ್ಯಂತರ ವರದಿಯಲ್ಲಿ ಶಿಫಾರಸ್ಸು ಮಾಡಿರುತ್ತದೆ.
ಆದರೆ, ಕೇಂದ್ರ ಸರ್ಕಾರವು, ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ ಈ ವಿಶೇಷ ಅನುದಾನವನ್ನು ನಮ್ಮ ರಾಜ್ಯಕ್ಕೆ ನೀಡಿರುವುದಿಲ್ಲ. ಅಲ್ಲದೆ, 15ನೇ ಹಣಕಾಸು ಆಯೋಗವು ತನ್ನ ಅಂತಿಮ ವರದಿಯಲ್ಲಿ ರಾಜ್ಯ ಕೇಂದ್ರಿತ ಕಾಮಗಾರಿಗಳ/ಯೋಜನೆಗಳಿಗೆ ಅನುದಾನವನ್ನು ಶಿಫಾರಸ್ಸು ಮಾಡಿರುತ್ತದೆ.
ನಮ್ಮ ರಾಜ್ಯಕ್ಕೆ 3,000 ಕೋಟಿ ರೂ.ಗಳ ಅನುದಾನವನ್ನು ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ಮತ್ತು 3,000 ಕೋಟಿ ರೂ.ಗಳನ್ನು ಬೆಂಗಳೂರು ನಗರದ ಪೆರಿಫೆರಲ್ ರಿಂಗ್ ರಸ್ತೆಗಾಗಿ ಎಂದು ರಾಜ್ಯ-ಕೇಂದ್ರಿತ ಅನುದಾನವನ್ನು ಶಿಫಾರಸ್ಸು ಮಾಡಿರುತ್ತದೆ. ಆದರೆ, ಕೇಂದ್ರ ಸರ್ಕಾರವು ಈ ಅನುದಾನವನ್ನು ನಮ್ಮ ರಾಜ್ಯಕ್ಕೆ ನೀಡಿರುವುದಿಲ್ಲ.
ADVERTISEMENT
ADVERTISEMENT