ಮಂಗಳೂರಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ದ್ವಿತೀಯ ಪಿಯು ವಿದ್ಯಾರ್ಥಿನಿಯರ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ನಡೆಸಿದ ಘಟನೆಯ ಹಿನ್ನೆಲೆ, ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ನಡೆದ ‘ಮಹಿಳೆಯರ ಮೇಲಿನ ದೌರ್ಜನ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ, ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಸಚಿವ ಪರಮೇಶ್ವರ್, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದೂ ಹೇಳಿದ್ದಾರೆ.
ಕಡಬದಲ್ಲಿ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ಸರ್ಕಾರ ಈಗಾಗಲೇ 4 ಲಕ್ಷ ರೂ. ಪರಿಹಾರ ಘೋಷಿಸಿದೆ. ಅವರಿಗೆ ಪ್ಲಾಸ್ಟಿಕ್ ಸರ್ಜರಿ ಅವಶ್ಯವಿದ್ದರೆ 20 ಲಕ್ಷದವರೆಗೂ ಖರ್ಚನ್ನು ಭರಿಸಲು ಮುಂದಾಗಿದೆ. ಜತೆಗೆ ಸಂತ್ರಸ್ತರಿಗೆ ನಿವೇಶನವನ್ನು ಕೂಡಾ ನೀಡಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.