ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಸಂಭಾವ್ಯ ಅಭ್ಯರ್ಥಿಯಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದರ ಬೆನ್ನಲ್ಲಿಯೇ ಡಾ. ಮಂಜುನಾಥ್ ಪರವಾಗಿ ರಾಜರಾಜೇಶ್ವರಿ ನಗರದಲ್ಲಿ ಚುನಾವಣಾ ಪ್ರಚಾರ ಕಾರ್ಯವನ್ನು ಕೈಗೊಳ್ಳಿದ್ದಾರೆ.
ಡಾ. ಸಿ.ಎನ್. ಮಂಜುನಾಥ್ ಅವರು ನಾಳೆ ಬಿಜೆಪಿ ಪಕ್ಷ ಸೇರ್ಪಡೆ ಆಗಲಿದ್ದಾರೆ. ಬೆಳಗ್ಗೆ 10ಗಂಟೆಗೆ ಪಕ್ಷ ಸೇರ್ಪಡೆ ಆಗಲಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರಲಿದ್ದಾರೆ. ರಾಧಾ ಮೋಹನ್ದಾಸ್ ಅಗರ್ವಾಲ್, ಯಡಿಯೂರಪ್ಪ, ವಿಜಯೇಂದ್ರ, ಅಶೋಕ್ ಸೇರಿದಂತೆ ಪ್ರಮುಖ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಡಾ.ಮಂಜುನಾಥ್ ಅವರ ಮನವೊಲಿಕೆ ಕಾರ್ಯ ಮಾಡಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಡಾ. ಮಂಜುನಾಥ್ ಅವರೇ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುಳಿವು ಕೂಡ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿನ ಆರ್.ಆರ್.ನಗರದ ಶಾಸಜ ಮುನಿರತ್ನ, ಬೆಂಗಳೂರು ದಕ್ಷಿಣದ ಶಾಸಕ ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಸೇರಿದಂತೆ ಹಲವರು ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಪ್ರಚಾರ ಕಾರ್ಯ ಆರಂಭವಾಗಲಿದ್ದು, ಇದರಲ್ಲಿ ಸ್ವತಃ ಸಂಭಾವ್ಯ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ವರು ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಸಂಜೆ 5 ಗಂಟೆಗೆ ಚುನಾವಣಾ ಪ್ರಚಾರದ ಕುರಿತ ಪೂರ್ವ ಸಿದ್ಧತಾ ಸಭೆಯನ್ನು ಬಿಜೆಪಿ ನಾಯಕರೊಂದಿಗೆ ನಡೆಸಲಾಗುತ್ತದೆ.