ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗಿದ್ದ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶವನ್ನು ಆಯಾ ಶಾಲೆಗಳಲ್ಲಿ ಸೋಮವಾರ (ಏ.8) ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚಿಸಿದೆ.
2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಕಳೆದ ಮಾರ್ಚ್ನಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿತ್ತು.
ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳ ಸಹಿತ ಶಾಲಾವಾರು ವಿದ್ಯಾರ್ಥಿಗಳ ಅಂಕಗಳನ್ನು ದಾಖಲಿಸಿರುವ ಪ್ರತಿಯನ್ನು ಆಯಾ ಶಾಲೆಗಳಿಗೆ ರವಾನಿಸಲಾಗಿದೆ. ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಸೋಮವಾರ ಶಾಲಾ ಹಂತದಲ್ಲಿ ಫಲಿತಾಂಶ ಪ್ರಕಟಿಸಬೇಕು. ಫಲಿತಾಂಶ ಪ್ರಕಟಿಸಿರುವ ಬಗ್ಗೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಂಡಳಿಗೆ ಹಾಗೂ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಗಳು ತಮ್ಮ ಕಚೇರಿಗೆ ಮಾಹಿತಿ ನೀಡಬೇಕೆಂದು ಮಂಡಳಿಯ ಅಧ್ಯಕ್ಷರು ಸೂಚಿಸಿದ್ದಾರೆ.