ಅಪ್ತಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಂಧನದ ವಾರೆಂಟ್ ಹೊರಡಿಸಲು ಬೆಂಗಳೂರಿನ ನ್ಯಾಯಾಲಯ ಅನುಮತಿ ನೀಡಿದೆ.
ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರಿಗೆ ಬೆಂಗಳೂರಿನ ವಿಶೇಷ ಪೋಕ್ಸೊ ನ್ಯಾಯಾಲಯ ಗುರುವಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಸಿಐಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 51ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್ ಎಂ ರಮೇಶ್ ಪುರಸ್ಕರಿಸಿದರು.
ಆರೋಪಿ ತುಂಬಾ ಬಲಾಢ್ಯರಾಗಿದ್ದು, ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಅವರ ಇಬ್ಬರು ಪುತ್ರರಲ್ಲಿ ಒಬ್ಬರು ಹಾಲಿ ಸಂಸದರು ಮತ್ತೊಬ್ಬರು ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರು. ಇಂತಹವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗುತ್ತಿಲ್ಲ. ಪದೇಪದೇ ಸಮಯ ಕೇಳುತ್ತಿದ್ದಾರೆ
ಘಟನೆ ನಡೆದ ದಿನವೇ ಯಡಿಯೂರಪ್ಪ ಸಂತ್ರಸ್ತ ಬಾಲಕಿಯ ತಾಯಿಗೆ ಎರಡು ಲಕ್ಷ ರೂಪಾಯಿಗಳನ್ನು ಬಲವಂತದಿಂದ ನೀಡಿದ್ದಾರೆ. ನೀನು ಕಷ್ಟದಲ್ಲಿ ಇದ್ದೀಯ, ಇಟ್ಟುಕೋ ಎಂದು ಸಮಾಧಾನ ಮಾಡುವ ನೆಪದಲ್ಲಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಸಂತ್ರಸ್ತೆಯ ತಾಯಿ ಮಾಡಿಕೊಂಡಿದ್ದ ವಿಡಿಯೋವನ್ನು ಡಿಲಿಟ್ ಮಾಡಿಸಿದ್ದಾರೆ. ಹೀಗೆ ಹಲವು ಹಂತಗಳಲ್ಲಿ ಸಾಕ್ಷ್ಯ ನಾಶ ಮಾಡುತ್ತಲೇ ಇದ್ದಾರೆ. ಒಂದು ವೇಳೆ ಅವರು ಕೇಳಿದಷ್ಟು ಸಮಯ ನೀಡಿದ್ದೇ ಆದರೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಕೂಡಲೇ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲು ಆದೇಶಿಸಬೇಕು