ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕೊಟಗಿನಾಳ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಹೊಸಪೇಟೆಯಿಂದ ಬಳ್ಳಾರಿ ಕಡೆ ಹೊರಟ್ಟಿದ್ದ ಸರ್ಕಾರಿ ಬಸ್ಸಿಗೆ ಲಾರಿ ಡಿಕ್ಕಿ ಹೊಡಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಗಾಯಗೊಂಡ ಪ್ರಯಾಣಿಕರ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರು ಎಂದು ವರದಿಗಳು ತಿಳಿಸಿವೆ. ಅಪಘಾತ ಬೆನ್ನಲ್ಲೇ ಸ್ಥಳೀಯರು ಪ್ರಯಾಣಿಕರ ನೆರವಿಗೆ ಧಾವಿಸಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಲಾರಿ ಚಾಲಕ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.