2024ರ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ ಅನ್ನೋ ಮಾತು ಕೇಳಿ ಬರುತ್ತಿದೆ.
ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ ಗೆಲ್ಲಲು ತಂತ್ರಗಾರಿಕೆ ನಡೆಸುತ್ತಿರುವ ಕಾಂಗ್ರೆಸ್, ಈ ಹಿನ್ನೆಲೆಯಲ್ಲಿ ರಾಷ್ಟ್ರಮಟ್ಟದ ನಾಯಕನನ್ನ ಸ್ಪರ್ಧೆಗಿಳಿಸೋ ಮೂಲಕ ಬಿಜೆಪಿಗೆ ಸಡ್ಡು ಹೊಡೆಯಲು ಮುಂದಾದಂತಿದೆ.
ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲುಲು ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಗೆ ಟಾರ್ಗೆಟ್ ನೀಡಿದೆ.
ಹೀಗಾಗಿ ಕಾಂಗ್ರೆಸ್ ನಾಯಕರು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಭಾವಿ ಅಭ್ಯರ್ಥಿಗಳ ಹುಡುಕಾಟ ನಡೆಸ್ತಿದ್ದು, ಪ್ರತಿ ಕ್ಷೇತ್ರದಲ್ಲೂ ಸಚಿವರನ್ನ ವೀಕ್ಷಕರಾಗಿ ನೇಮಕ ಮಾಡಲಾಗಿದೆ.
ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ನ ಅತೃಪ್ತ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕ್ತಿದೆ. ಹಿರಿಯ ನಾಯರ, ಮಾಜಿ ಸಚಿವ ವಿ.ಸೋಮಣ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿತ್ತು. ಆದ್ರೆ ಇದಕ್ಕೆ ಸ್ಥಳೀಯ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿರೋದ್ರಿಂದ, ಸೋಮಣ್ಣ ತುಮಕೂರಿನಿಂದ ಸ್ಪರ್ಧೆಗಿಳಿಯೋದು ಸಂಶಯವಾಗಿದೆ. ಈ ನಡುವೆ ಕರ್ನಾಟಕದ ತುಮಕೂರಿನಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡ್ತಾರೆ ಅನ್ನೋ ಮಾತು ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ನಾಯಕರೂ ಕೂಡ ರಾಹುಲ್ ಗಾಂಧಿಯವರೇ ಸ್ಪರ್ಧಿಸಲಿ ಎಂದು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿಯವರಿಗೆ ತುಮಕೂರಿನಿಂದಲೇ ಸ್ಪರ್ಧಿಸುವಂತೆ ಆಹ್ವಾನ ನೀಡಲು ಜಿಲ್ಲಾ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.