ADVERTISEMENT
ತುಮಕೂರು ಲೋಕಸಭಾ ಕ್ಷೇತ್ರದಿಂದ BJP ವಿ ಸೋಮಣ್ಣ ಅವರಿಗೆ ಟಿಕೆಟ್ ನೀಡಿದೆ. ಸೋಮಣ್ಣ ಅವರನ್ನು ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಬೆಂಗಳೂರಿನ ಗೋವಿಂದರಾಜನಗರದ ಬದಲು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದ ಕಣಕ್ಕಿಳಿಸಿತ್ತು ಬಿಜೆಪಿ.
ಚಾಮರಾಜನಗರದಲ್ಲಿ ಮಾಜಿ ಸಚಿವ ಪುಟ್ಟರಂಗಶೆಟ್ಟಿ ಅವರ ವಿರುದ್ಧ 7 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋತರೆ ವರುಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ 46 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋತರು.
ಅಳೆದು ತೂಗಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಈ ಮೂಲಕ ಹಾಲಿ ಸಂಸದೆ ಮಂಜುಳಾ ಅಂಗಡಿ ಅವರು ತಮ್ಮ ಬೀಗರಿಗೆ ಅನಿವಾರ್ಯವಾಗಿ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ.
6 ಬಾರಿ ಶಾಸಕರಾಗಿದ್ದ ಶೆಟ್ಟರ್ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ವಕ್ಷೇತ್ರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ನಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರ ವಿರುದ್ಧ 34 ಸಾವಿರ ಮತಗಳಿಂದ ಹೀನಾಯವಾಗಿ ಸೋತರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಕೇಂದ್ರ ಸಚಿವ ವಿ ನಾರಾಯಣಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ.
73 ವರ್ಷದ ಕಾರಜೋಳ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈಗ ಅಬಕಾರಿ ಸಚಿವರಾಗಿರುವ ಆರ್ ಬಿ ತಿಮ್ಮಾಪೂರ್ ವಿರುದ್ಧ ಸೋತಿದ್ದರು.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಅನಂತ್ ಕುಮಾರ್ ಹೆಗಡೆ ಬದಲಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ.
2023ರ ಮೇವರೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಸಭೆ ಸ್ಪೀಕರ್ ಆಗಿದ್ದ 62 ವರ್ಷದ ಕಾಗೇರಿಯವರು ಶಿರಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ವಿರುದ್ಧ ಸೋತಿದ್ದರು.
ಚಿಕ್ಕಬಳ್ಳಾಪುರದಿಂದ ಮಾಜಿ ಸಚಿವ ಡಾ ಕೆ ಸುಧಾಕರ್ ಅವರಿಗೆ ಟಿಕೆಟ್ ನೀಡಲಾಗಿದೆ. ಸುಧಾಕರ್ ಅವರು ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ವಿರುದ್ಧ 10 ಸಾವಿರಕ್ಕೂ ಅಧಿಕ ಮತಗಳಿಂದ ಸೋತಿದ್ದರು.
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸೋತಿದ್ದ ಬಿ ಶ್ರೀರಾಮುಲು ಅವರಿಗೆ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಈಗ ಸಚಿವರಾಗಿರುವ ನಾಗೇಂದ್ರ ಅವರ ವಿರುದ್ಧ 29 ಸಾವಿರಕ್ಕೂ ಅಧಿಕ ಮತಗಳಿಂದ ಸೋತಿದ್ದರು.
ಇನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸೌಮ್ಯ ರೆಡ್ಡಿ ಅವರಿಗೆ ಕಾಂಗ್ರೆಸ್ನಿಂದ ಟಿಕೆಟ್ ನೀಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಮಗಳು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 16 ಮತಗಳ ಅಂತರದಿಂದ ಬಿಜೆಪಿ ಶಾಸಕ ಸಿ ಕೆ ರಾಮಮೂರ್ತಿ ಅವರ ವಿರುದ್ಧ ಸೋತಿದ್ದರು.
ಖಾನಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ನಿಂಬಾಳ್ಕರ್ ಅವರು ಬಿಜೆಪಿ ಶಾಸಕ ವಿಠಲ್ ಹಲಗೇಕರ್ ವಿರುದ್ಧ 54 ಸಾವಿರ ಮತಗಳ ಅಂತರದಿಂದ ಸೋತಿದ್ದರು.
ಹಾಸನ ಲೋಕಸಭಾ ಕ್ಷೇತ್ರದಿಂದ ಶ್ರೇಯಸ್ ಪಟೇಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದ ಶ್ರೇಯಸ್ ಪಟೇಲ್ ಅವರು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ವಿರುದ್ಧ 3,152 ಮತಗಳ ಅಂತರದಲ್ಲಿ ಸೋತಿದ್ದರು.
ADVERTISEMENT