ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಾಠ ಕಲಿಸುತ್ತೇವೆ ಎಂಬ ನಾರಾಯಣಗೌಡ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಏನು ಬೇಕಾದರೂ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.
“ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕನ್ನಡಪರ ಹೋರಾಟಗಾರರ ಸಹಕಾರ ಇಲ್ಲ ಎಂದು ನಾನು ಹೇಳುವುದಿಲ್ಲ. ಹಾಗೆಂದು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಏನು ಬೇಕಾದರೂ ಮಾಡಲಿ. ಅವರು ತಪ್ಪು ಮಾಡಿದ್ದಾರೆ. ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ. ಅನೇಕರು ಇಲ್ಲಿ ಬಂದು ಬಂಡವಾಳ ಹೂಡಿಕೆ ಮಾಡಿದ್ದಾರೆ. ಹೊರಗಡೆಯಿಂದ ಬಂದವರು ಇಲ್ಲಿ ಬದುಕುತ್ತಿದ್ದಾರೆ. ಅವರಿಗೆ ಕನ್ನಡ ಬಳಕೆ ಬಗ್ಗೆ ಹೇಳೋಣ. ಹಾಗೆಂದು ಅವರನ್ನು ಬೆದರಿಸಲು ಅವಕಾಶವಿಲ್ಲ” ಎಂದು ತಿಳಿಸಿದರು.
ಅನೇಕರು ಕನ್ನಡ ನಾಮಫಲಕ ಹಾಕದಿರುವ ಬಗ್ಗೆ ಕೇಳಿದಾಗ, “ಯಾರೆಲ್ಲಾ ಕನ್ನಡ ನಾಮಫಲಕ ಹಾಕಿಲ್ಲ ಅವರಿಗೆ ನಾವು ನೊಟೀಸ್ ಜಾರಿ ಮಾಡುತ್ತೇವೆ” ಎಂದು ತಿಳಿಸಿದರು.
ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರ ಅಕ್ರಮ ಮಾಡಿತ್ತು ಎಂಬ ಯತ್ನಾಳ್ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, “ಇಲ್ಲಿ ಆ ವಿಚಾರ ಮಾತನಾಡುವುದು ಬೇಡ. ನಾವು ಅದೇ ವಿಚಾರವಾಗಿ ಜನರ ಗಮನ ಸೆಳೆದಿದ್ದೆವು. ಈಗ ಅವರು ಸೆಳೆಯುತ್ತಿದ್ದಾರೆ. ಬಹಳ ಸಂತೋಷ. ಮುಂದೆ ಅದರ ಬಗ್ಗೆ ಚರ್ಚೆ ಮಾಡೋಣ.” ಎಂದರು.
ಅನೇಕ ಅಂಗಡಿ ಮುಂಗಟ್ಟುಗಳು ಮುಚ್ಚಿರುವ ವಿಚಾರವಾಗಿ ಕೇಳಿದಾಗ, “ಎಲ್ಲಾ ವ್ಯಾಪಾರಿಗಳು ಸರ್ಕಾರದ ಆದೇಶ ಪಾಲನೆ ಮಾಡಬೇಕು. ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯವಾಗಿ ಬಳಸಬೇಕು. ಸರ್ಕಾರ ನಿಮ್ಮ ಹಾಗೂ ನಿಮ್ಮ ಹಿತಾಸಕ್ತಿ ಕಾಯಲು ಬದ್ಧವಾಗಿದೆ” ಎಂದು ಉಪ ಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿದರು.