ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ವಿಧಾನಮಂಡಲದಲ್ಲಿ ನಡೆದ ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಸಿದ್ದರಾಮಯ್ಯ ಉತ್ತರಿಸಿದರು.
ಪ್ರತ್ಯೇಕ ಕರ್ನಾಟಕಕ್ಕೆ ಮಾಡುವ ಒತ್ತಾಯವು, ಕರ್ನಾಟಕ ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನ. ಏಕೀಕರಣಕ್ಕಾಗಿ ಬಹಳ ಜನ ಹೋರಾಟ ಮಾಡಿದ್ದಾರೆ.
ಹೈದರಾಬಾದ್ ಕರ್ನಾಟಕಕ್ಕೆ 371 ಗೆ ತಿದ್ದುಪಡಿ ಆಗಿ 371 ಜೆ ಪರಿಚ್ಛೇದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್, ವೈಜನಾಥ್ ಪಾಟೀಲ್ ಮುಂತಾದವರು ಹೋರಾಡಿದರು. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 2014 ಮತ್ತು 2017 ರಲ್ಲಿ ಉತ್ತರ ಕರ್ನಾಟಕದದ ಬಗ್ಗೆ ಚರ್ಚೆಯಾಗಿತ್ತು. ಒಮ್ಮೆ ಈ ಬಗ್ಗೆ 2 ಗಂಟೆಗಳಿಗೂ ಹೆಚ್ಚು ಕಾಲ ಉತ್ತರ ನೀಡಿದ್ದೆ ಅಂತ ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.
ಮೀಸಲಿಟ್ಟ ಅನುದಾನ ಖರ್ಚಾಗಿ ಅಭಿವೃದ್ಧಿಯಾಗಬೇಕು. ಕಿತ್ತೂರು ಕರ್ನಾಟದ 5 ತಾಲ್ಲೂಕುಗಳು ಸೇರಿದಂತೆ ಅತಿ ಹಿಂದುಳಿದ ಅತ್ಯಂತ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ಕೊಡಲಾಗುವುದು ಕಲ್ಯಾಣ ಕರ್ನಾಟಕಕ್ಕೆ 2013-14 ರಿಂದ ಈವರೆಗೆ 14877.36 ಕೋಟಿ ರೂ. ಮೀಸಲಿಡಲಾಗಿದೆ.
10280 ಕೋಟಿ ರೂ. ಬಿಡುಗಡೆಯಾಗಿದ್ದು ಇದರಲ್ಲಿ 8330 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ವರ್ಷದಿಂದ 5000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು. ಮುಂಬೈ ಕರ್ನಾಟಕದ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ನೀಡಲಾಗುವುದು ಎಂದರು.
ಸದನದಲ್ಲಿ 2 ದಿನಗಳ ಕಾಲ ಉತ್ತರ ಕರ್ನಾಟಕದ ಅಭಿವೃದ್ದಿ ವಿಚಾರವಾಗಿ ಚರ್ಚೆ ನಡೆದಿತ್ತು. ಈ ಭಾಗದ ಹಲವು ಶಾಸಕರು ಉತ್ತರಕರ್ನಾಟಕದ ಸಮಸ್ಯೆಗಳನ್ನು ಸದನದ ಮುಂದಿಟ್ಟಿದ್ದರು ಹಾಗೆಯೇ ಬಿಜೆಪಿ ಶಾಸಕ ಅಭಯ ಪಾಟೀಲ್ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆಯೂ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.