ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ದೇಶದಲ್ಲಿ ಸೃಷ್ಟಿಯಾದ ಕೆಟ್ಟ ಆರ್ಥಿಕ ಬಿಕ್ಕಟ್ಟಿಂದ ಶ್ರೀಲಂಕಾದ ಚಿತ್ರಣವೇ ಬದಲಾಗಿಹೋಗಿದೆ. ಹಣದುಬ್ಬರ ಹೊಡೆತಕ್ಕೆ ಸಿಲುಕಿ ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ.
ಶ್ರೀಲಂಕಾ ಸರ್ಕಾರದ ವಿರುದ್ಧ ಸಾರ್ವಜನಿಕರು ಬೀದಿಗಿಳಿದು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಬಾಹ್ಯ ಸಾಲದಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.
ಆರ್ಥಿಕ ಬಿಕ್ಕಟ್ಟು ಉಂಟಾಗಿರುವ ಪರಿಣಾಮ ಶ್ರೀಲಂಕಾ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಶುಕ್ರವಾರ ರಾಷ್ಟ್ರವ್ಯಾಪಿ ಮುಷ್ಕರ ನಡೆಸಿವೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ದೇಶದ ಆರ್ಥಿಕ ಪರಿಸ್ಥಿತಿ ಹದಗೆಡಲು ಕಾರಣರಾದ ಭ್ರಷ್ಟ ವ್ಯವಸ್ಥೆ ಮತ್ತು ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಈಗಾಗಲೇ ಶ್ರೀಲಂಕಾದಲ್ಲಿ ಅಗತ್ಯವಸ್ತುಗಳ ಬೆಲೆ ಜನಸಾಮಾನ್ಯರ ಕೈಗೆ ನಿಲುಕದಷ್ಟು ಏರಿಕೆಯಾಗಿವೆ. ಹಣದುಬ್ಬರದ ಪರಿಣಾಮ ಜನಸಾಮಾನ್ಯರು ಜೀವನ ನಡೆಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಅಧ್ಯಕ್ಷ ಗೋಟಬಯ ರಾಜಪಕ್ಸೆ ವಕ್ತಾರರು ತಿಳಿಸಿದ್ದಾರೆ.