ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ದೆಹಲಿಗೆ ತೆರಳಲಿದ್ದಾರೆ.
ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್ಗೆ ಚುನಾವಣೆಗೆ ಮೊದಲೇ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೆಲವು ದಿನಗಳಿಂದ ಚರ್ಚೆಗೆ ಗ್ರಾಸವಾಗಿತ್ತು. ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಯೂ ಸದ್ದು ಮಾಡಿತ್ತು. ಈ ಹಿನ್ನೆಲೆ ಇಂದು ಎಚ್ಡಿಕೆ ದೆಹಲಿ ಪ್ರಯಾಣ ಕುತೂಹಲ ಕೆರಳಿಸಿದೆ.
‘ಕುಮಾರಸ್ವಾಮಿ ಮತ್ತು ಅವರ ಮಗ ನಿಖಿಲ್ ಕುಮಾರಸ್ವಾಮಿ ಇಬ್ಬರೂ ಬುಧವಾರ ದೆಹಲಿಗೆ ತೆರಳಲಿದ್ದಾರೆ. ಅಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸುವ ಸಾಧ್ಯತೆ ಇದೆ. ಸಂಪುಟದಲ್ಲಿ ಸ್ಥಾನ ನೀಡುವ ಕುರಿತು ಯಾವುದೇ ಮಾಹಿತಿ ಇಲ್ಲ’ ಎಂದು ಕುಮಾರಸ್ವಾಮಿ ಅವರ ಆಪ್ತ ಮೂಲಗಳು ತಿಳಿಸಿವೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ. ಜೆಡಿಎಸ್ ಈಗ ಎನ್ಡಿಎ ಪಾಲುದಾರ ಪಕ್ಷವಾಗಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಿಂದ ಐದು ಕ್ಷೇತ್ರಗಳು ತಮ್ಮ ಪಕ್ಷಕ್ಕೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದೆ. ಆದರೆ, ಸೀಟು ಹಂಚಿಕೆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಹಾಗಾಗಿ, ಈ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಲಿರುವ ಹೆಚ್ ಡಿಕೆ, ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.