ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ತಳಿ ಆತಂಕ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿ ಪ್ರಕಾರ ಗಡಿ ಜಿಲ್ಲೆಗಳಲ್ಲಿ ತಪಾಸಣೆ ಹೆಚ್ಚಳ ಮಾಡಲು ಸೂಚನೆ ನೀಡಲಾಗಿದೆ.
ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನದಟ್ಟಣೆಯಿಂದಾಗಿ ಮತ್ತಷ್ಟು ಹೆಚ್ಚಳವಾಗುವ ಸಂಭವವಿದೆ. ಹಾಗಾಗಿ, ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಕೋವಿಡ್ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿರುವ ಈ ಕೆಳಗಿನ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ನೀಡಲಾಗಿದೆ.
ರಾಜ್ಯದಲ್ಲೂ ಕೋವಿಡ್- 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ಹಾಗೂ 60 ವರ್ಷದ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮಾಸ್ಕ್ ಧರಿಸುವುದು ಸೇರಿದಂತೆ ಹಲವರು ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿದೆ.
- ಎಲ್ಲ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು.
- ಅಗತ್ಯ ಗಾಳಿ – ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.
- ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.
- ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು,
- ಅಗತ್ಯ ಗಾಳಿ – ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.
- ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.
- ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ.
- ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು.
- ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ.
- ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ, ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತ.
- ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ -19ನ ಮುಂಜಾಗ್ರತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಈ ಎಲ್ಲ ಅಂಶಗಳನ್ನು ಪಾಲಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.