ADVERTISEMENT
ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ.
ಜೊತೆಗೆ ಮುಡಾ ಹಗರಣ ಬಗ್ಗೆ ಇದುವರೆಗೆ ನಡೆಸಲಾಗಿರುವ ತನಿಖೆಯ ಬಗ್ಗೆ ವರದಿಯನ್ನು ಸಲ್ಲಿಸುವಂತೆಯೂ ಸೂಚಿಸಿದೆ.
ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬಾತ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಅಗತ್ಯವಿದೆ ಎಂದು ಈ ಹಿಂದೆ ಆದೇಶ ನೀಡಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠವೇ ಸಿಬಿಐ ತನಿಖೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿದೆ.
ಅರ್ಜಿದಾರ ಸ್ನೇಹಮಯಿ ಕೃಷ್ಣ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಕೆ ಜಿ ರಾಘವನ್ ಅವರು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬುದು ನಮ್ಮ ಕೋರಿಕೆಯಾಗಿದೆ ಎಂದರು.
ಆಗ ನ್ಯಾಯಮೂರ್ತಿ ನಾಗಪ್ರಸನ್ನ ಅವರು `ಲೋಕಾಯುಕ್ತದವರು ತನಿಖೆ ನಡೆಸುತ್ತಿಲ್ಲವೇ..?’ ಎಂದು ಪ್ರಶ್ನಿಸಿದರು.
ಆಗ ವಕೀಲ ರಾಘವನ್ ಅವರು, `ಈಗ ಲೋಕಾಯುಕ್ತದವರು ತನಿಖೆ ನಡೆಸುತ್ತಿದ್ದಾರೆ. ಇಂಥ ಪ್ರಕರಣದಲ್ಲಿ ತನಿಖಾ ಪ್ರಕ್ರಿಯೆಯು ಸಾರ್ವಜನಿಕ ನಂಬಿಕೆ ಉಳಿಯುಂತೆ ನಡೆಯಬೇಕಿದೆ. ಹೀಗಾಗಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಮನವಿ ಮಾಡಿದರು.
ಹೆಚ್ಚುವರಿ ರಾಜ್ಯ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರ ಪ್ರತಿಕ್ರಿಯಿಸಿ `ಲೋಕಾಯುಕ್ತ ಪೊಲೀಸರು (ಸಿಎಂ ಸಿದ್ದರಾಮಯ್ಯ, ಪತ್ನಿ, ಭಾವಮೈದುನ ಇತರರ ವಿರುದ್ಧ) ಎಫ್ಐಆರ್ ದಾಖಲಿಸುತ್ತಿದ್ದಂತೆಯೇ ಈ ಅರ್ಜಿ ಸಲ್ಲಿಕೆ ಮಾಡಲಾಗಿದೆ’ ಎಂದರು.
ಕೇಂದ್ರ ಗೃಹ ಇಲಾಖೆಯ ಪರವಾಗಿ ಸಹಾಯಕ ಸಾಲಿಸಿಟರ್ ಜನರಲ್ ಎಚ್ ಶಾಂತಿಭೂಷಣ್, ರಾಜ್ಯ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮೈಸೂರಿನ ವಿಜಯನಗರ ಪೊಲೀಸ್ ಠಾಣಾಧಿಕಾರಿಯ ಪರವಾಗಿ ಜಗದೀಶ್, ಸಿಬಿಐ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್, ಲೋಕಾಯುಕ್ತರ ಪರವಾಗಿ ಬಿ ಬಿ ಪಾಟೀಲ್ಗೆ ನೋಟಿಸ್ ಪಡೆಯಲಿದ್ದಾರೆ. ಸಿದ್ದರಾಮಯ್ಯ, ಅವರ ಪತ್ನಿ ಬಿ ಎಂ ಪಾರ್ವತಿ, ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಮತ್ತು ಜಮೀನು ಮಾಲೀಕ ಜೆ ದೇವರಾಜುಗೆ ನೋಟಿಸ್ ಜಾರಿ ಮಾಡಿದೆ.
ರಾಜ್ಯಪಾಲರು ತನಿಖೆಗೆ ಅನುಮತಿಸಿರುವ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾ ಮಾಡುವ ಸಂದರ್ಭದಲ್ಲಿ ಹೈಕೋರ್ಟ್ನ ಏಕಸದಸ್ಯ ಪೀಠವು ಹಲವು ವಿಚಾರಗಳನ್ನು ಅನಾವರಣಗೊಳಿಸಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನಾಮನಿರ್ದೇಶಿಸುವ ಹಾಲಿ ನ್ಯಾಯಮೂರ್ತಿಯೊಬ್ಬರನ್ನು ಪ್ರಕರಣದ ಮೇಲ್ವಿಚಾರಣೆ ವಹಿಸಲು ಆದೇಶಿಸಬೇಕು. ಇಲ್ಲವೇ, ಹೈಕೋರ್ಟ್ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿ ಮೇಲ್ವಿಚಾರಣೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸುವಂತೆ ಅರ್ಜಿದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದಾರೆ.
ಈಗಾಗಲೇ ಕರ್ನಾಟಕ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಳೆ ಅಂದರೆ ನವೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಪಾರ್ವತಿ ಅವರ ಸಹೋದರ ಬಿ ಎಂ ಮಲ್ಲಿಕಾರ್ಜುನಸ್ವಾಮಿ ಮತ್ತು ಬಿ ಎಂ ಮಲ್ಲಿಕಾರ್ಜುನಸ್ವಾಮಿ ಅವರಿಗೆ ಭೂಮಿ ಮಾರಿದ್ದ ದೇವರಾಜು ಅವರ ವಿಚಾರಣೆಯನ್ನು ನಡೆಸಿದೆ.
ADVERTISEMENT