ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿಯ ನಂತರ ಇದೀಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದೆ.
ಈ ಬಗ್ಗೆ ಸ್ವತಃ ಮಲ್ಲಿಕಾರ್ಜುನ್ ಖರ್ಗೆಯವರೇ ಇಂದು ಗುರುವಾರ ಸದನದಲ್ಲಿ ಮಾಹಿತಿ ನೀಡಿದ್ದಾರೆ.
ಮಲ್ಲಿಕಾರ್ಜುನ್ ಖರ್ಗೆಯವರು ಸದನದಲ್ಲಿ ಮಾತನಾಡುತ್ತಾ, ಇಡಿ ಇಂದು ನನಗೆ ಸಮನ್ಸ್ ಜಾರಿ ಮಾಡಿದೆ ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಸದನದ ಅವಧಿಯಲ್ಲಿ ಹಾಜರಾಗಲು ಸಾಧ್ಯವೇ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೇಂದ್ರ ಸಚಿವ ಪಿಯೂಸ್ ಗೋಯಲ್ ಮತ್ತು ಮಲ್ಲಿಕಾರ್ಜುನ್ ಖರ್ಗೆ ನಡುವೆ ಸ್ವಲ್ಪ ಹೊತ್ತು ವಾಗ್ವಾದ ನಡೆಯಿತು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿಚಾರಣೆ ನಡೆದಿದೆ. ಮಂಗಳವಾರವಷ್ಟೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನ್ಯಾಷನಲ್ ಹೆರಾಲ್ಡ್ ಕಚೇರಿಯ ಮೇಲೆ ದಾಳಿ ನಡೆಸಿತ್ತು. ಅಲ್ಲದೇ, ಈ ಕಚೇರಿಗಳಿಗೆ ಇಡಿ ಅಧಿಕಾರಿಗಳು ಬೀಗ ಜಡಿದಿದ್ದರು.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಹುಲ್ ಗಾಂಧಿಯವರು, ನರೇಂದ್ರ ಮೋದಿಯವರಿಗೆ ನಾನು ಹೆದರೋದಿಲ್ಲ ಎಂದು ಹೇಳಿದ್ದಾರೆ.