ಪಾಟ್ನಾ: ಜೆಡಿಯು ನಾಯಕ ನಿತೀಶ್ ಕುಮಾರ್ ) ಅವರು ಬಿಜೆಪಿ ಬೆಂಬಲದೊಂದಿಗೆ ನಾಳೆ (ಭಾನುವಾರ) ಮತ್ತೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಕಾಂಗ್ರೆಸ್ ಮತ್ತು ಆರ್ಜೆಡಿ ಎರಡೂ ತಮ್ಮ ಶಾಸಕರ ಸಭೆ ಕರೆದಿವೆ. ಆದರೆ ಬೆಳವಣಿಗೆಯಾಗುತ್ತಿರುವ ರಾಜಕೀಯ ಸನ್ನಿವೇಶಕ್ಕೆ ಯಾವುದೇ ಸಂಬಂಧವಿಲ್ಲ. ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ಸಿದ್ಧತೆಗಳನ್ನು ಚರ್ಚಿಸಲು ಸಭೆ ನಡೆಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ.
ಆಡಳಿತಾರೂಢ ‘ಮಹಾಘಟಬಂಧನ್’ ತೊರೆದು ಬಿಜೆಪಿ ನೇತೃತ್ವದ ಎನ್ಡಿಎಗೆ ಮರಳಲು ಯೋಜಿಸುತ್ತಿದ್ದಾರೆ ಎಂಬ ಬಲವಾದ ಸೂಚನೆಗಳ ನಡುವೆ ಜೆಡಿಯುನ ಉನ್ನತ ನಾಯಕರು ಪಕ್ಷದ ಅಧ್ಯಕ್ಷ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸಕ್ಕೆ ಶನಿವಾರ ದೌಡಾಯಿಸಿದ್ದಾರೆ. ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್, ‘ಲಾಲನ್’, ಸಚಿವ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ಝಾ ಮತ್ತು ರಾಜ್ಯ ವಿಧಾನ ಪರಿಷತ್ತಿನ ಅಧ್ಯಕ್ಷ ದೇವೇಶ್ ಚಂದ್ರ ಠಾಕೂರ್ ಸಿಎಂ ಅವರ ಅಧಿಕೃತ ನಿವಾಸಕ್ಕೆ ಬಂದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್ಡಿಎ) ಮರಳುವ ಬಗ್ಗೆ ಊಹಾಪೋಹಗಳ ನಡುವೆ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಶನಿವಾರ ಬಿಜೆಪಿ ಕೇಂದ್ರ ನಾಯಕತ್ವವು “ಬಿಹಾರದ ರಾಜಕೀಯ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ” ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್, ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ಉಭಯ ನಾಯಕರಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವುದಾಗಿ ಹೇಳಿದ್ದಾರೆ.