ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತಾದ ನೂಪುರ್ ಶರ್ಮಾ ಅವರ ವಿರುದ್ಧ ಶುಕ್ರವಾದ ನಮಾಜ್ ನಂತರ ದೇಶಾದ್ಯಂತ ದಿಢೀರ್ ಪ್ರತಿಭಟನೆಗಳು ನಡೆದವು. ಈ ಪ್ರತಿಭಟನೆಯ ಭಾಗವಾಗಿ ರಾಂಚಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಪ್ರಾರ್ಥನೆ ನಂತರ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಮುಸ್ಲಿಮರು ನೂಪರ್ ಶರ್ಮಾ ಹಾಗೂ ಬಿಜೆಪಿಯಿಂದ ಉಚ್ಚಾಟಿತಗೊಂಡ ನವೀನ್ ಜಿಂದಾಲ್ ಅವರನ್ನು ಬಂಧಿಸುವಂತೆ ಘೋಷಣೆ ಕೂಗಿದರು. ಈ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರತಿಭಟನೆ ನಿಯಂತ್ರಿಸಲು ಅಶ್ರುವಾಯು ಸಿಡಿಸಿದ ಪೊಲೀಸರು, ಪ್ರತಿಭಟನೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಹುಂಡು ಹಾರಿಸಿದ್ದರು, ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. 10 ಕ್ಕಿಂತ ಹೆಚ್ಚಿನ ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ವಲ್ಪ ಉದ್ವಿಗ್ನತೆ ಇದ್ದರೂ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ರಾಂಚಿ ಡಿಐಜಿ ಅನೀಶ್ ಗುಪ್ತಾ ಹೇಳಿದ್ದಾರೆ.
ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ರನ್ನು ಬಂಧಿಸುವಂತೆ ದೇಶಾದ್ಯಂತ ಏಕಾಕಾಲಕ್ಕೆ ಪ್ರತಿಭಟನೆ ನಡೆಸಲಾಗಿದೆ. ದೆಹಲಿ, ಉತ್ತರಪ್ರದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಲ್ಲು ತೂರಾಟ, ಹಿಂಸಾಚಾರ ನಡೆದ ಬಗ್ಗೆ ವರದಿಯಾಗಿದೆ.