ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನನ್ನು ಬಂಧಿಸಲಾಗಿದೆ. ಈ ಹಗರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದ್ದು, ಇದುವರೆಗೂ ಹಲವಾರು ಜನರನ್ನು ಬಂಧಿಸಲಾಗಿದೆ.
ಶುಕ್ರವಾರ ಸಿಐಡಿ ಪೊಲೀಸರು ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧಿಸಿದ್ದಾರೆ. ಬ್ಲೂಟೂತ್ ಡಿವೈಸ್ ಬಳಸಿ ಪರೀಕ್ಷೆ ಬರೆಸುವಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್ನಲ್ಲಿ ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಮಹಾಂತೇಶ್ ಪಾಟೀಲ್ನನ್ನು ವಿಚಾರಣೆಗೆ ಕರೆತಂದಿದ್ದು, ಆಗ ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಪೊಲೀಸರಿಗೆ ಧಮ್ಕಿ ಸಹ ಹಾಕಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದ ಅವಧಿಯಲ್ಲಿ ಮಹಾಂತೇಶ್ ಪಾಟೀಲ್ ಹಲವು ಉನ್ನತ ಸ್ಥಾನಗಳನ್ನು ಪಡೆದಿದ್ದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸದಸ್ಯರಾಗಿದ್ದರು. ಶನಿವಾರ ಮಹಾಂತೇಶ್ ಪಾಟೀಲ್ ಹಾಗೂ ಆತನ ಸಹೋದರ ಆರ್.ಡಿ.ಪಾಟೀಲ್ 101 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದರು. ಇದರ ಸಿದ್ಧತೆ ಪರಿಶೀಲನೆ ನಡೆಸುತ್ತಿರುವಾಗಲೇ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಕಲಬುರಗಿ ನಗರದ ವಿಶಾಲ್ ಶಿರೂರ ಎಂಬ ಅಭ್ಯರ್ಥಿಯನ್ನು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಅಕ್ರಮದ ಪ್ರಮುಖ ಆರೋಪಿ ಎಂದು ಗುರುತಿಸಲಾಗಿರುವ ಬಿಜೆಪಿಯ ದಿವ್ಯಾ ಹಾಗರಗಿಯವರು ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.