ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಮರು ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಮದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯ ವಿಚಾರದಲ್ಲಿ ಸಿಐಡಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಬೇರೆ ಬೇರೆಯವರ ಒತ್ತಡಕ್ಕೆ ಮಣಿಯುವುದಿಲ್ಲ. ಪರೀಕ್ಷೆಯಲ್ಲಿ ಅಕ್ರಮ ಮಾಡುವವರು ಎದೆಮುಟ್ಟಿ ನೋಡಿಕೊಳ್ಳುವಂತೆ ಮಾಡುತ್ತೇವೆ. ಸಿಐಡಿ ತನಿಖೆ ಪೂರ್ಣಗೊಂಡ ನಂತರವಷ್ಟೇ ಪಿಎಸ್ಐ ಮರುಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಹಣವಿದ್ದರೆ ಮಾತ್ರ ಪಿಎಸ್ಐ ಹುದ್ದೆಗೆ ಆಯ್ಕೆಯಾಗುತ್ತೇವೆ ಎಂದು ಅಭ್ಯರ್ಥಿಗಳಲ್ಲಿ ಮೂಡಿರುವ ನಂಬಿಕೆಯನ್ನು ಪಾರದರ್ಶಕ ತನಿಖೆಯ ಮೂಲಕ ಹೋಗಲಾಡಿಸಲಿದ್ದೇವೆ ಎಂಬ ಮಾತನ್ನು ಸಚಿವರು ಇದೇ ವೇಳೆ ಪುನರುಚ್ಚರಿಸಿದರು.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ಸಾಕ್ಷ್ಯಾಧಾರಗಳು ಸಿಗುವವರೆಗೂ ಯಾರನ್ನೂ ಮುಟ್ಟುವುದಿಲ್ಲ. ಸರಿಯಾದ ಸಾಕ್ಷ್ಯಾಧಾರಗಳು ದೊರೆತರೆ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ದೊಡ್ಡ ದೊಡ್ಡ ಪೊಲೀಸ್ ಅಧಿಕಾರಿಗಳನ್ನು ಬಿಟ್ಟಿಲ್ಲ. ಈ ವಿಚಾರದಲ್ಲಿ ತನಿಖಾ ಸಂಸ್ಥೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ಪೌಲ್ ಅವರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ.