ದೇಶದ್ರೋಹದ ಕಾನೂನಿನ ಬಗ್ಗೆ ಕೇಂದ್ರ ಸರ್ಕಾರ ಮರುಪರಿಶೀಲನೆ ಮಾಡುವವರೆಗೆ ದೇಶದ್ರೋಹ ಅಮಾನತಿನಲ್ಲಿಡುವಂತೆ ಸುಪ್ರೀಂಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು, ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿರುವವರು ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಬಹುದು ಎಂದೂ ಆದೇಶದಲ್ಲಿ ತಿಳಿಸಿದೆ.
ಈ ಮೂಲಕ ಬ್ರಿಟಿಷ್‌ರಾಜ್ ಕಾಲದ 152 ವರ್ಷಗಳಷ್ಟು ಹಳೆಯದಾದ ಐಪಿಸಿ ಸೆಕ್ಷನ್ 124ಎ ಅಥವಾ ದೇಶದ್ರೋಹಕ್ಕೆ ಸಂಬಂಧಿಸಿದ ಕಲಂನ್ನು ರದ್ದುಪಡಿಸಿಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯ ವೇಳೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಹಿಮಂತ್ ಕೊಹ್ಲಿ ಅವರಿದ್ದ ತ್ರಿಸದಸ್ಯ ಪೀಠ ಐತಿಹಾಸಿಕ ಮಧ್ಯಂತರ ಆದೇಶ ನೀಡಿದೆ.
ಅಲ್ಲದೇ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ದೇಶದ್ರೋಹ ಪ್ರಕರಣ ದಾಖಲಿಸದಂತೆಯೂ ಸೂಚಿಸಿದೆ. ದೇಶದ್ರೋಹ ಪ್ರಕರಣದಲ್ಲಿ ಈಗ ನಡೆಯುತ್ತಿರುವ ತನಿಖೆಯನ್ನೂ ಮುಂದುವರಿಸದಂತೆ ಮತ್ತು ಈ ಪ್ರಕರಣಗಳಲ್ಲಿ ಆರೋಪಿಗಳ ಮೇಲೆ ಪ್ರತಿಕೂಲ ಕ್ರಮಗಳನ್ನು ತೆಗೆದುಕೊಳ್ಳದಂತೆಯೂ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಈ ಪ್ರಕರಣದಲ್ಲಿ ಜೈಲಿನಲ್ಲಿರುವ ಆರೋಪಿಗಳಿಗೆ ಕೋರ್ಟ್ಗಳು ತನ್ನ ಆದೇಶವನ್ನು ಪರಿಗಣಿಸಿ ಜಾಮೀನು ಅರ್ಜಿಯನ್ನು ಪರಿಗಣಿಸಬೇಕು ಎಂದೂ ಸೂಚಿಸಿದೆ.