ರಾಜ್ಯದ ಯುವಜನತೆ ವಿದ್ಯಾರ್ಹತೆಗೆ ತಕ್ಕಂತೆ ಉತ್ತಮ ಉದ್ಯೋಗ ಕಂಡುಕೊಳ್ಳುವುದಕ್ಕೆ ಆದ್ಯತೆ ನೀಡಿರುವ ಸಿದ್ದರಾಮಯ್ಯ ಸರ್ಕಾರ, ರಾಜ್ಯ ಮಟ್ಟದ ಉದ್ಯೋಗ ಮೇಳ ಆಯೋಜಿಸಲು ತೀರ್ಮಾನಿಸಿದೆ.
ಈ ನಿಟ್ಟಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಯ್ತು. ಯುವಜನತೆಗೆ ತಮ್ಮ ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಸಚಿವರನ್ನು ಒಳಗೊಂಡ ಸಮಿತಿ ರಚಿಸಲು ಈ ಸಭೆಯಲ್ಲಿ ತೀರ್ಮಾನ ಮಾಡಲಾಯ್ತು.
ಈ ತಂಡವು ಖಾಸಗಿ ಕಂಪನಿಯವರೊಂದಿಗೆ ಸಭೆ ನಡೆಸಿ, ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಕ್ರಮವಹಿಸಲಿದೆ. ಮತ್ತು ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಗೆ ತಕ್ಕಂತೆ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳನ್ನು ರೂಪಿಸುವ ಕುರಿತಾಗಿ ಶಿಫಾರಸ್ಸು ಮಾಡುವಂತೆ ಮತ್ತು ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತಾಗಿ ಪರಿಶೀಲನೆ ನಡೆಸಲಿದೆ.