ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕು ಎನ್ನುವ ಕೂಗು ಕಾಂಗ್ರೆಸ್ ಶಾಸಕರಲ್ಲಿ ಜೋರಾಗಿದೆ. `ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಇದು ಜನರ ಕೂಗು. ಅದರ ಜೊತೆ ನಮ್ಮ ಬೆಂಬಲ ಇದೆ’ ಎಂದು ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.
`ರಾಜ್ಯದಲ್ಲಿ ಆರ್ಥಿಕ ವ್ಯವಸ್ಥೆ ಸರಿ ಹೋಗಬೇಕಾದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು. ರೈತರು, ಮಹಿಳೆಯರು ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು ಎಂದು ಬಯಿಸಿದ್ದಾರೆ ಸಿದ್ದರಾಮಯ್ಯ ಐದು ವರ್ಷದಲ್ಲಿ ೧೫ ಲಕ್ಷ ಮನೆ ಕೊಟ್ಟಿದ್ದರು. ಸಿದ್ದರಾಮಯ್ಯ ಅವಧಿಯಲ್ಲಿ ಅನ್ನಭಾಗ್ಯ, ಕ್ಷೀರ ಭಾಗ್ಯ ಯೋಜನೆ ಕೊಟ್ಟಿದ್ದರು. ಈಗ ಬಿಜೆಪಿ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ’ ಎಂದು ಶಾಸಕ ಹಿಟ್ನಾಳ್ ಹೇಳಿದ್ದಾರೆ.
`ಹಿರಿಯರು ಅಂದಮೇಲೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಇದ್ದೇ ಇರುತ್ತೆ’ ಎಂದರು.
ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ `ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ’ ಎಂದು ದೇವಸ್ಥಾನದ ಕಾರ್ಯಕ್ರಮವೊಂದರಲ್ಲಿ ಕೇಳಿಕೊಂಡಿದ್ದರು.