ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವ ನಿಧಿಗೆ ಇಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಿರು ಕಾಂಗ್ರೆಸ್ ಇದೀಗ 5ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಜಾರಿಗೆ ತರುತ್ತಿದೆ. ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಆನ್ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಮಾಡಿಕೊಂಡವರ ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಗೆ ಬಿಜೆಪಿಯ ಭದ್ರಕೋಟೆಯಾಗಿರುವ ಮಲೆನಾಡು ಶಿವಮೊಗ್ಗದಲ್ಲೇ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ.
ಇಂದು ಯುವಜನತೆಯ ಸ್ಫೂರ್ತಿಯಾದ ಸ್ವಾಮಿ ವಿವೇಕಾನಂದ ಜಯಂತಿ. ಈ ದಿನವನ್ನು ರಾಷ್ಟ್ರೀಯ ಯುವ ದಿನಾಚರಣೆಯನ್ನಾಗಿಯೂ ಆಚರಿಸಲಾಗ್ತಿದೆ. ಈ ಹಿನ್ನೆಲೆ ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿಂದು ಯುವ ನಿಧಿ ಯೋಜನೆ ಚಾಲನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಯೋಜನೆಗೆ ಚಾಲನೆ ನೀಡಲಿದ್ದಾರೆ.
2022-23ನೇ ಸಾಲಿನಲ್ಲಿ ಉತ್ತೀರ್ಣರಾದ ನಿರುದ್ಯೋಗಿಗಳು ಯೋಜನೆಗೆ ಅರ್ಹರಾಗಿದ್ದು, ಒಟ್ಟು 5.29 ಲಕ್ಷ ಫಲಾನುಭವಿಗಳಿಗೆ ಇದರ ಪ್ರಯೋಜನ ಲಭ್ಯವಾಗಲಿದೆ. ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಚಿತ್ರದುರ್ಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ ಸೇರಿ ಬೇರೆ ಬೆರೆ ಜಿಲ್ಲೆಗಳಿಂದ ಜನ ಆಗಮಿಸುವ ನಿರೀಕ್ಷೆಯಿದೆ.
ಇನ್ನೂ ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆಯಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, 4 ಗ್ಯಾರಂಟಿಗಳಂತೆ 5ನೇ ಗ್ಯಾರಂಟಿಯೂ ಯಶಸ್ವಿ ಆಗುತ್ತೆ. ಯುವಕರು ಯುವನಿಧಿ ಯೋಜನೆ ಲಾಭ ಪಡೆಯಬೇಕು ಎಂದು ಹೇಳಿದ್ದಾರೆ.