ಕಾಂಗ್ರೆಸ್ ನಲ್ಲಿ ಇಬ್ರಾಹಿಂ, ನಾನು, ಸಿದ್ದರಾಮಯ್ಯ ಅವರು ಸೇರಿದಂತೆ ಯಾರೂ ತಬ್ಬಲಿಯಾಗಿಲ್ಲ. ನಾವೆಲ್ಲಾ ಒಂದೇ. ಸಿ.ಎಂ.ಇಬ್ರಾಹಿಂ ಅವರ ಜೊತೆ ಮಾತನಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ಗೆ ಗುಡ್ ಬೈ ಹೇಳಿದ ವಿಚಾರವಾಗಿ ಮಾತನಾಡಿದ ಅವರು, ನನ್ನ ಹಾಗೂ ಕಾಂಗ್ರೆಸ್ ಸಂಬಂಧ ಮುಗಿಯಿತು ಎಂಬ ಸಿ.ಎಂ ಇಬ್ರಾಹಿಂ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ಇಬ್ರಾಹಿಂ ಅವರು ಹಿರಿಯ ನಾಯಕರು. ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಸಿದ್ದರಾಮಯ್ಯ ಅವರ ಕಾಲದಲ್ಲಿ ಹಾಲಿ ಶಾಸಕರನ್ನು ಬಿಟ್ಟು ಅವರಿಗೆ ಟಿಕೆಟ್ ನೀಡಲಾಗಿತ್ತು. ಅವರು ಸೋತ ನಂತರವೂ ಅವರಿಗೆ ಸಂಪುಟ ಸ್ಥಾನಮಾನ ನೀಡಿ ಯೋಜನಾ ಆಯೋಗದ ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು.
ಸತತ ಎರಡು ಬಾರಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಅವರು ಪಕ್ಷದ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅಸಮಾಧಾನ ಇರುತ್ತದೆ ಹೀಗಾಗಿ ಅವರು ಮಾತನಾಡಿದ್ದಾರೆ. ಅವರು ನಮ್ಮ ಸ್ನೇಹಿತರು, ನಮಗೆ ಒಳ್ಳೆಯದು ಬಯಸಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಖಂಡಿತವಾಗಿಯೂ ಅವರ ಜತೆ ಮಾತನಾಡುತ್ತೇನೆ’ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ ಎಂಬ ಇಬ್ರಾಹಿಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅವರು ಕಾಂಗ್ರೆಸ್ ಪಕ್ಷದ ಸದಸ್ಯರು. ಪಕ್ಷ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದೆ. ಅವರು ನೋವಿನಿಂದ ಮಾತನಾಡಿದ್ದಾರೆ, ಅದನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದರು.
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರು ತಬ್ಬಲಿಯಾಗಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರಶ್ನೆ ಕೇಳಿದಾಗ, ಕಾಂಗ್ರೆಸ್ ನಲ್ಲಿ ಇಬ್ರಾಹಿಂ, ನಾನು, ಸಿದ್ದರಾಮಯ್ಯ ಅವರು ಸೇರಿದಂತೆ ಯಾರೂ ತಬ್ಬಲಿಯಾಗಿಲ್ಲ. ನಾವೆಲ್ಲಾ ಒಂದೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.