ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ ತೀರ್ಪನ್ನು ಪಾಲಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯ ಸುತ್ತೋಲೆ ಹೊರಡಿಸಿದೆ. ತನ್ನ ವ್ಯಾಪ್ತಿಗೆ ಬರುವ 212 ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು ಸ್ಥಳದಲ್ಲಿ ಭಾರೀ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಪ್ರತಿಭಟನಾ ಸ್ಥಳದ ಹತ್ತಿರ ಜನರನ್ನು ಬಿಡದೆ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಹಿಜಾಬ್ ಧಾರಿ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ಅಲ್ಲಾಹು ಅಕ್ಬರ್ ಘೋಷಣೆ ಕೂಗುತ್ತಿದ್ದಾರೆ. ಹಿಜಾಬ್ ಚಳುವಳಿ ( Movement ) ಎಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಲಾಗುತ್ತಿದೆ.
ಮಂಗಳೂರು ವಿವಿ ಸಮನ್ವಯ ಸಮಿತಿ ಹೆಸರಲ್ಲಿ ಪೊಲೀಸ್ ಅನುಮತಿ ಪಡೆದು ಮಂಗಳೂರಿನ ಕ್ಲಾಕ್ ಟವರ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.
ಇನ್ನು, ವಿದ್ಯಾರ್ಥಿಗಳು ರಸ್ತೆಗೆ ಅಡ್ಡಲಾಗಿ ಕುಳಿತು ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆದಿದೆ. ಪ್ರತಿಭಟನೆಗೆ ಅವಕಾಶ ಕೊಡದ ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ರಸ್ತೆಯಲ್ಲೇ ವಿದ್ಯಾರ್ಥಿನಿಯರು ಕುಳಿತು ಧರಣಿ ನಡೆಸಿದ್ದಾರೆ.